ಜನರ ಧ್ವನಿ ನ್ಯೂಸ್
ರಾತ್ರಿ ವೇಳೆ ಅನೈತಿಕ ಚಟುವಟಿಕೆಗಳಿಗೆ ತಾಣವಾಗಿದೆಯೇ? ಸಾರ್ವಜನಿಕರಲ್ಲಿ ಆತಂಕ
ಮುದ್ದೇಬಿಹಾಳ, ಜುಲೈ 21:
ಮುದ್ದೇಬಿಹಾಳ ಪಟ್ಟಣದಲ್ಲಿರುವ ಹಳೆಯ ನ್ಯಾಯಾಲಯದ ಕಟ್ಟಡವು ಹಲವು ವರ್ಷಗಳಿಂದ ಬಳಕೆಯಲ್ಲಿಲ್ಲ. ಪ್ರಸ್ತುತ ನ್ಯಾಯಾಲಯದ ಕಾರ್ಯಚಟುವಟಿಕೆಗಳು ಹೊಸ ಕಟ್ಟಡದಲ್ಲಿ ನಡೆಯುತ್ತಿರುವುದರಿಂದ ಈ ಹಳೆಯ ಕಟ್ಟಡ ನಿರ್ವಹಣೆಯಿಲ್ಲದೆ ನಿರ್ಲಕ್ಷ್ಯಕ್ಕೊಳಗಾಗಿದೆ.
ಕಟ್ಟಡದ ಆವರಣದಲ್ಲಿ ಎಲ್ಲೆಂದರಲ್ಲಿ ಕಸ, ತ್ಯಾಜ್ಯ ಹಾಗೂ ಗಿಡಗಂಟಿಗಳು ಬೆಳೆದು ದುರ್ವಾಸನೆ ಹರಡುತ್ತಿದೆ. ಇದರಿಂದ ಸುತ್ತಮುತ್ತಲಿನ ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.
ಪುರಸಭೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಅಲ್ಲದೆ ಸಂಬಂಧಪಟ್ಟ ಅಧಿಕಾರಿಗಳು ಇಲ್ಲಿ ಗಮನಹರಿಸುವುದಿಲ್ಲ
ಸ್ಥಳೀಯರ ಆರೋಪದ ಪ್ರಕಾರ, ರಾತ್ರಿ ವೇಳೆಯಲ್ಲಿ ಈ ನಿರ್ಜನ ಪ್ರದೇಶದಲ್ಲಿ ಕೆಲವರು ಮದ್ಯಪಾನ ಮಾಡುವುದು ಸೇರಿದಂತೆ ಸಮಾಜವಿರೋಧಿ ಹಾಗೂ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ ಎನ್ನಲಾಗಿದೆ. ಈ ಕಾರಣದಿಂದ ರಾತ್ರಿ ಸಮಯದಲ್ಲಿ ಈ ಭಾಗದಲ್ಲಿ ಸಂಚರಿಸಲು ಸಾರ್ವಜನಿಕರು ಭಯಪಡುವಂತಾಗಿದೆ ಎಂದು ಅವರು ತಿಳಿಸಿದ್ದಾರೆ.
ಸುತ್ತಮುತ್ತಲಿನ ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರು ಮಾತ್ರ ಈ ಪ್ರದೇಶದಲ್ಲಿ ಓಡಾಡುತ್ತಿದ್ದಾರೆ. ಹೀಗಾಗಿ ಕಟ್ಟಡದ ಆವರಣದ ನಿರ್ವಹಣೆ ಸಂಪೂರ್ಣವಾಗಿ ಕಡೆಗಣಿಸಲ್ಪಟ್ಟಿದೆ ಎಂಬ ಆರೋಪ ಕೇಳಿಬಂದಿದೆ.
ಸ್ಥಳೀಯರು ಸಂಬಂಧಪಟ್ಟ ಇಲಾಖೆ ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಆವರಣವನ್ನು ಸ್ವಚ್ಛಗೊಳಿಸುವುದರ ಜೊತೆಗೆ ರಾತ್ರಿ ವೇಳೆಯಲ್ಲಿ ಪೊಲೀಸ್ ಗಸ್ತು ಹೆಚ್ಚಿಸಿ, ಯಾವುದೇ ಅಹಿತಕರ ಅಥವಾ ಕಾನೂನುಬಾಹಿರ ಚಟುವಟಿಕೆಗಳು ನಡೆಯದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.







